ಮುಂದಿನ 2 ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ 9 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಕೆಲವೆಡೆ ಮಳೆಯಾಗಲಿದೆ. ಕರಾವಳಿಯ ಉಳಿದ ಭಾಗ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ. ಬೀದರ್, ರಾಯಚೂರು, ಕಲಬುರಗಿ, ಯಾದಗಿರಿ, ಚಿಕ್ಕಬಳ್ಳಾಪುರ, ಕೊಡಗು, ಬೆಂಗಳೂರು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಕೃಷ್ಣರಾಜಪೇಟೆ, ಕೃಷ್ಣರಾಜಸಾಗರ, ಗುಬ್ಬಿಯಲ್ಲಿ ಮಳೆಯಾಗಿದೆ.
ಕಲಬುರಗಿಯಲ್ಲಿ ಗರಿಷ್ಠ 39.5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮಧ್ಯಾಹ್ನದ ವೇಳೆ ಮೋಡ ಕವಿದ ವಾತಾವರಣ ನಿರ್ಮಾಣವಾಗಲಿದ್ದು, ರಾತ್ರಿ ವೇಳೆ ಸಣ್ಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಹೆಚ್‌ಎಎಲ್ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ, ನಗರದಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ, ಕೆಐಎಎಲ್ 33.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಬಿಸಿಲಿನ ಪ್ರಮಾಣ ಸ್ವಲ್ಪ ಕಡಿಮೆಯಾಗಿದೆ.