ಹುಬ್ಬಳ್ಳಿ : ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಹಿಳಾ ವರ್ಗಕ್ಕೆ ಅವಮಾನ ಮಾಡಲಾಗಿದೆ ಎಂದು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ಮಾಡಲಾಯಿತು. ಪ್ರಜ್ವಲ ರೇವಣ್ಣನ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ, ಹುಬ್ಬಳ್ಳಿಯ ಅಂಬೇಡ್ಕರ್ ವೃತ್ತದಲ್ಲಿ ಯುಥ್ ಕಾಂಗ್ರೆಸ್ ವತಿಯಿಂದ ಪ್ರಜ್ವಲ್ ರೇವಣ್ಣ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಪ್ರತಿಕೃತಿ ದಹನ ಮಾಡಿ ಪ್ರತಿಭಟನೆ ನಡೆಸಿದರು.
ಹುಬ್ಬಳ್ಳಿಯಲ್ಲಿ ಯವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ನೋಡ ನೋಡುತ್ತಿದ್ದಂತೆ ಅಂಬೇಡ್ಕರ್ ವೃತ್ತದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆ ಭುಗೆಲೆದ್ದಿತು.
ಪ್ರಜ್ವಲ್ ರೇವಣ್ಣ ವಿರುದ್ಧ ಘೋಷಣೆ ಕೂಗಿ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಫೋಟೋ, ಪ್ರತಿಕೃತಿಗೆ ಬೆಂಕಿ ಇಟ್ಟರು. ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ನಾಯಕರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಜನರು, ಮಹಿಳೆಯರು ತಕ್ಕ ಉತ್ತರ ಕೊಡಬೇಕು
ಈ ವೇಳೆ ಮಾತನಾಡಿದ ಮೊಹಮ್ಮದ್ ನಲಪಾಡ್ ಹ್ಯಾರೀಸ್, ಅನೇಕ ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯ ನಡೆಸಿರುವ ಇಂತಹ ವ್ಯಕ್ತಿಗಳನ್ನು ಬಂಧಿಸಬೇಕು. ಇವರಿಗೆ ಕರ್ನಾಟಕದ ಜನತೆ ತಕ್ಕ ಉತ್ತರ ನೀಡಬೇಕು. ಇಂತಹ ಹೀನ ಕೃತ್ಯವನ್ನು ಕರ್ನಾಟಕದ ಅಕ್ಕ ತಂಗಿಯರು, ಮಹಿಳೆಯರು ಸಹಿಸಬಾರದು ಎಂದು ಹೇಳಿದರು.
ಬಹಿರಂಗವಾದ ವಿಡಿಯೋ ಕುರಿತು ಮಾತನಾಡಿದ ಅವರು, ಮನೆ ಕೆಲಸದವರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ಅವರನ್ನು ಬೆದರಿಸಲಾಗಿದೆ. ಕೈ ಮುಗಿದರೂ ಬಿಡದೇ ಕೃತ್ಯಕ್ಕೆ ಬಳಸಿಕೊಳ್ಳಲಾಗಿದೆ. ಸೂಕ್ತ ತನಿಖೆ ನಡೆಸಿ ಕೂಡಲೇ ಪ್ರಜ್ವಲ್ ರೇವಣ್ಣನನ್ನ ಬಂಧಿಸಬೇಕು ಎಂದು ಆಗ್ರಹಿಸಿದರು.