ಬೆಂಗಳೂರು: ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ ಸಿ.ಎಂ.ಇಬ್ರಾಹಿಂ ಅವರನ್ನು ಉಚ್ಚಾಟಿಸಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
ಉಚ್ಚಾಟನೆ ಮತ್ತು ಅಧ್ಯಕ್ಷ ಹುದ್ದೆಗೆ ತಾತ್ಕಾಲಿಕವಾಗಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ನೇಮಿಸಿದ ಕ್ರಮವನ್ನು ಪ್ರಶ್ನಿಸಿ ಸಿ.ಎಂ.ಇಬ್ರಾಹಿಂ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಅಸಲು ದಾವೆ ಸಲ್ಲಿಸಿದ್ದರು. ಈ ದಾವೆಯನ್ನು ತಿರಸ್ಕರಿಸಲಾಗಿತ್ತು.
ಈ ಆದೇಶ ರದ್ದು ಕೋರಿ ಸಿ.ಎಂ.ಇಬ್ರಾಹಿಂ ಹೈಕೋರ್ಟ್‌ನಲ್ಲಿ ನಿಯಮಿತ ಮೊದಲ ಮೇಲ್ಮನವಿ (ಆರ್‌ಎಫ್‌ಎ) ಸಲ್ಲಿಸಿದ್ದು, ಈ ಅರ್ಜಿಯನ್ನು ರಜಾ ಕಾಲದ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಸಿ.ಎಂ.ಪೂಣಚ್ಚ ಗುರುವಾರ ವಿಚಾರಣೆ ನಡೆಸಿದರು.
ವಿಚಾರಣೆ ವೇಳೆ ಜೆಡಿಎಸ್ ಪರ ಹಾಜರಿದ್ದ ಹಿರಿಯ ವಕೀಲ ಉದಯ ಹೊಳ್ಳ ಹಾಗೂ ಇಬ್ರಾಹಿಂ ಪರ ಹಿರಿಯ ವಕೀಲ ವಿಕ್ರಂ ಹುಯಿಲಗೋಳ ಅವರ ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾದ ಎಚ್.ಡಿ.ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿತು. ವಿಚಾರಣೆಯನ್ನು ಜೂನ್ 4ಕ್ಕೆ ಮುಂದೂಡಲಾಗಿದೆ.