ವಾರಣಾಸಿ : ಲೋಕಸಭಾ ಚುನಾವಣೆಯ ಕಾವು ದಕ್ಷಿಣ ಭಾರತದಲ್ಲಿ ಕಡಿಮೆಯಾಗಿದ್ದರೂ, ಉತ್ತರ ಭಾರತದಲ್ಲಿ ಭರ್ಜರಿಯಾಗಿ ಮತಬೇಟೆ ನಡೆಯುತ್ತಿದೆ. ಈತನ್ಮಧ್ಯೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಸತತ ಮೂರನೇ ಬಾರಿಗೆ ನಾಮಪತ್ರ ಸಲ್ಲಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಸತತ ಮೂರನೇ ಬಾರಿಗೆ ಚುನಾವಣೆಗೆ ಸ್ಪರ್ಧಿಸುತ್ತಿದ್ದು, 2014 ಮತ್ತು 2019ರಲ್ಲಿ ಇಲ್ಲಿಂದ ಸಂಸದರಾಗಿ ಆಯ್ಕೆಯಾಗಿದ್ದರು. ಇದೀಗ ಸತತ ಮೂರನೇ ಬಾರಿಗೆ ಪ್ರಧಾನಿ ಮೋದಿಯವರು ಇದೇ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವುದರಿಂದ ಇಂದು ನಾಮಪತ್ರ ಸಲ್ಲಿಸಿದ್ದಾರೆ.
ಇದಕ್ಕೂ ಮೊದಲು ಪ್ರಧಾನಿ ಮೋದಿ ಅವರು ಗಂಗಾ ನದಿಯಲ್ಲಿ ಸ್ನಾನಗೈದು ಗಂಗಾರತಿ ಮಾಡಿ ಗಂಗಾಮಾತೆಯ ಆಶೀರ್ವಾದ ಪಡೆದರು. ನಂತರ ಕ್ರೂಸ್ ಹಡಗಿನ ಮೂಲಕ ವಾರಣಾಸಿಯ ದಶಾಶ್ವಮೇಧ ಘಾಟ್‌ಗೆ ಭೇಟಿ ನೀಡಿದರು. ಆ ಬಳಿಕ ವಾರಣಾಸಿಯ ಕಾಲ ಭೈರವ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿ ಕಾಲಭೈರವನ ಆಶೀರ್ವಾದ ಪಡೆದರು. ಆದರೆ ಅದಾಗಲೇ ಕಾಲ ಭೈರವ ದೇವಾಲಯಕ್ಕೆ ಆಗಮಿಸಿದ್ದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಪ್ರಧಾನಿ ನರೇಂದ್ರ ಮೋದಿಯನ್ನು ಸ್ವಾಗತಿಸಿದರು. ಕಾಲ ಭೈರವ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಬಳಿಕ ನೇರವಾಗಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಪ್ರಧಾನಿ ಮೋದಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು.
ಪ್ರಧಾನಿ ನರೇಂದ್ರ ಮೋದಿಯವರು ನಾಮಪತ್ರ ಸಲ್ಲಿಸುವ ವೇಳೆ ಸುಮಾರು ಹನ್ನೊಂದು ರಾಜ್ಯಗಳ ಮುಖ್ಯಮಂತ್ರಿಗಳು ಪಾಲ್ಗೊಂಡಿದ್ದಾರೆ. ಮಾಹಿತಿ ಪ್ರಕಾರ ಪ್ರಧಾನಿ ನರೇಂದ್ರ ಮೋದಿಯವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಕೂಡ ಆಗಮಿಸಬೇಕಿತ್ತು, ಆದರೆ ನಿತೀಶ್ ಕುಮಾರ್ ಅವರಿಗೆ ಅನಾರೋಗ್ಯ ಉಂಟಾದ ಕಾರಣ ಅವರು ಇಂದಿನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ಹೀಗಾಗಿ 11 ರಾಜ್ಯಗಳ ಸಿಎಂಗಳು ನರೇಂದ್ರ ಮೋದಿಯವರ ನಾಮಪತ್ರ ಸಲ್ಲಿಕೆ ವೇಳೆ ಉಪಸ್ಥಿತರಿದ್ದರು.
ಪ್ರಧಾನಿ ನರೇಂದ್ರ ಮೋದಿ ಅವರ ನಾಮಪತ್ರ ಸಲ್ಲಿಕೆ ವೇಳೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್, ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ, ರಾಜಸ್ಥಾನ ಸಿಎಂ ಭಜನ್ಲಾಲ್ ಶರ್ಮಾ, ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ , ಛತ್ತೀಸ್‌ಗಢ ಸಿಎಂ ವಿಷ್ಣು ದೇವ್ ಸಾಯಿ, ಹರಿಯಾಣ ಸಿಎಂ ನಯಾಬ್ ಸಿಂಗ್ ಸೈನಿ, ಗೋವಾ ಸಿಎಂ ಪ್ರಮೋದ್ ಸಾವಂತ್, ತ್ರಿಪುರಾ ಸಿಎಂ ಮಾಣಿಕ್ ಸಹಾ, ಸಿಕ್ಕಿಂ ಸಿಎಂ ಪ್ರೇಮ್ ಸಿಂಗ್ ತಮಾಂಗ್, ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಭಾಗಿಯಾಗಿದ್ದಾರೆ.