ನ್ಯಾಯಾಲಯಕ್ಕೆ ನೀಡಿದ ಭರವಸೆಯಂತೆ ನಿಗದಿತ ಅವಧಿಯಲ್ಲಿ ಜಿಲ್ಲಾ ಪಂಚಾಯ್ತಿ ಹಾಗೂ ತಾಲ್ಲೂಕು ಪಂಚಾಯ್ತಿ ಕ್ಷೇತ್ರಗಳಿಗೆ ಮೀಸಲು ಅಂತಿಮ ಗೊಳಿಸದ ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಆರೋಪದಡಿ ಪ್ರಕರಣ ದಾಖಲಿಸಿದೆ.
ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾ. ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿದ್ದು, ಸರ್ಕಾರ ತನ್ನ ವಾದ ಮಂಡಿಸಲು ಕಾಲಾವಕಾಶ ಕೋರಿದೆ. ಅದರಂತೆ ಹೈಕೋರ್ಟ್ ಅರ್ಜಿ ವಿಚಾರಣೆಯನ್ನು ಜುಲೈ 11ಕ್ಕೆ ಮುಂದೂಡಿದೆ.
ಅರ್ಜಿ ವಿಚಾರಣೆ ವೇಳೆ ರಾಜ್ಯ ಚುನಾವಣಾ ಆಯೋಗದ ಪರ ವಾದ ಮಂಡಿಸಿದ ಹಿರಿಯ ವಕೀಲ ಕೆ.ಎನ್.ಫಣೀಂದ್ರ, ನ್ಯಾಯಾಲಯಕ್ಕೆ ನೀಡಿದ್ದ ಭರವಸೆಯಂತೆ ಸರ್ಕಾರ ನಡೆದುಕೊಂಡಿಲ್ಲ. ಆದ್ದರಿಂದ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.