ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಕೂಗು, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಒತ್ತಡ ಇತ್ಯಾದಿ ವಿಚಾರಗಳಿಂದ ಕಾಂಗ್ರೆಸ್ ಒಳಬೇಗುದಿ ಹೆಚ್ಚಾಗುತ್ತಿರುವ ಬೆನ್ನಲ್ಲೇ ಆಂತರಿಕ ಸಂಘರ್ಷಕ್ಕೆ ಬ್ರೇಕ್ ಹಾಕಲು ಕಾಂಗ್ರೆಸ್ ಹೈಕಮಾಂಡ್ ಮುಂದಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸಹ ಬಹಿರಂಗ ಹೇಳಿಕೆಗಳನ್ನು ನೀಡದಂತೆ ಬೆಂಬಲಿಗರಿಗೆ ಸೂಚನೆ ನೀಡಿದ್ದರು. ನೋಟಿಸ್ ನೀಡುವ ಎಚ್ಚರಿಕೆನ್ನೂ ನೀಡಲಾಗಿತ್ತು. ಆದಾಗ್ಯೂ, ಕೆಲವು ನಾಯಕರು ಕಿಮ್ಮತ್ತೇ ನೀಡಿಲ್ಲ. ಈ ಮಧ್ಯೆ, ಸಿಎಂ ಸಿದ್ದರಾಮಯ್ಯ ಪಾಳೆಯದ ಸಚಿವರಿಗೆ ಹೈಕಮಾಂಡ್ ಮಟ್ಟದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಟಕ್ಕರ್ ಕೊಟ್ಟಿರುವುದು ತಿಳಿದುಬಂದಿದೆ..
ಹೌದು ,ಸಿಎಂ ಆಗಿ ಸಿದ್ದರಾಮಯ್ಯ ಅವರೇ ಮುಂದುವರೆಯುತ್ತಾರೆ. ಎಲ್ಲಾ ಶಾಸಕರೂ ಸೇರಿ ಸಿದ್ದರಾಮಯ್ಯ ಅವರನ್ನ ಆಯ್ಕೆ ಮಾಡಿದ್ದಾರೆ ಎನ್ನುವ ವಾದಗಳಿಗೆ ಕೌಂಟರ್ ಎಂಬಂತೆ ಲಕ್ಷ್ಮೀ ಹೆಬ್ಬಾಳಕರ್ ಹೈಕಮಾಂಡ್ ಬಳಿ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಕೆಲವರು ಗೊಂದಲ ಸೃಷ್ಟಿ ಮಾಡುವ ಕೆಲಸ ಮಾಡುತ್ತಿದ್ದಾರೆ. ಇಂತಹ ಗೊಂದಲಗಳು ಆಗದಂತೆ ಕಡಿವಾಣ ಹಾಕಿ ಎಂದು ಲಕ್ಷ್ಮೀ ಹೆಬ್ಬಾಳಕರ್ ಮನವಿ ಮಾಡಿದ್ದಾರೆ. ಈ ಮೂಲಕ ಸಿಎಂ ಪರವಾಗಿ ಬ್ಯಾಟಿಂಗ್ ಮಾಡುತ್ತಿರುವವರಿಗೆ ತಿರುಗೇಟು ನೀಡಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ. ನಮಗೆ ಸಿಎಂ ಹಾಗೂ ಡಿಸಿಎಂ ಇಬ್ಬರೂ ಮುಖ್ಯ ಎನ್ನುವ ಮೂಲಕ ಇಬ್ಬರೂ ಸಮಾನರು ಎಂಬ ಅಭಿಪ್ರಾಯವನ್ನು ಲಕ್ಷ್ಮೀ ಹೆಬ್ಬಾಳಕರ್ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.