ಕಬ್ಬು ಬೆಳೆಗಾರರ ನ್ಯಾಯಯುತ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರೆ ನೀಡಿರುವ ಕರ್ನಾಟಕ ಬಂದ್‌ನಿಂದ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕು ಸಂಪೂರ್ಣ ಸ್ತಬ್ಧಗೊಂಡಿದೆ.
ಬೆಳಗಾವಿ: ಕಬ್ಬು ಬೆಳೆಗಾರರಿಗೆ ಸೂಕ್ತ ಬೆಂಬಲ ಬೆಲೆ ಹಾಗೂ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಬಿಸಿ ಬೆಳಗಾವಿ ಜಿಲ್ಲೆಯಲ್ಲಿ ತೀವ್ರವಾಗಿ ಗೋಚರಿಸಿದೆ. ಅದರಲ್ಲೂ ವಿಶೇಷವಾಗಿ
ಅಥಣಿ ತಾಲೂಕು ಸಂಪೂರ್ಣವಾಗಿ ಸ್ತಬ್ಧಗೊಂಡಿದ್ದು, ಪಟ್ಟಣ ಹಾಗೂ ಗ್ರಾಮೀಣ ಭಾಗಗಳಲ್ಲಿ ಬಂದ್‌ಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ.
ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಸ್ಥಳೀಯ ವ್ಯಾಪಾರಸ್ಥರು ಮತ್ತು ವಾಣಿಜ್ಯೋದ್ಯಮಿಗಳು ಸ್ವಯಂಪ್ರೇರಿತವಾಗಿ ಅಂಗಡಿ-ಮುಟ್ಟುಗಳನ್ನು ಮುಚ್ಚಿ ವ್ಯವಹಾರ ಸ್ಥಗಿತಗೊಳಿಸಿದ್ದಾರೆ. ಇದರಿಂದಾಗಿ ಅಥಣಿ ಪಟ್ಟಣದ ಪ್ರಮುಖ ರಸ್ತೆಗಳು ಜನಸಂಚಾರವಿಲ್ಲದೆ ಬಿಕೋ ಎನ್ನುತ್ತಿದ್ದವು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ದೋಖಾ ನೀತಿಯ ವಿರುದ್ಧ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಸರ್ಕಾರದ ವಿರುದ್ಧ ದಿಢೀರ್ ಘೋಷಣೆಗಳನ್ನು ಕೂಗಿದರು.
ಸಾರಿಗೆ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತ:
ಪ್ರತಿಭಟನೆಯ ತೀವ್ರತೆಯಿಂದಾಗಿ ಸಾರಿಗೆ ವ್ಯವಸ್ಥೆ ಸಂಪೂರ್ಣವಾಗಿ ವ್ಯತ್ಯಯಗೊಂಡಿದೆ. ಗ್ರಾಮೀಣ ಪ್ರದೇಶಗಳಲ್ಲಿ ಆಕ್ರೋಶಗೊಂಡ ರೈತರು ರಸ್ತೆಗಳ ಮಧ್ಯೆ ಮುಳ್ಳಿನ ಕಂಠಿ ಹಾಗೂ ಟೈರ್‌ಗಳಿಗೆ ಬೆಂಕಿ ಹಚ್ಚಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ತಡೆದಿದ್ದಾರೆ. ಪರಿಣಾಮವಾಗಿ ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್‌ಗಳು ಸಂಚರಿಸಲಾಗದೆ ಡಿಪೋಗಳಲ್ಲೇ ಉಳಿಯಬೇಕಾಯಿತು. ದೂರದೂರುಗಳಿಗೆ ತೆರಳಬೇಕಾದ ಪ್ರಯೋಗಿಕ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುವಂತಾಯಿತು.
ಕೇಂದ್ರ-ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ ರೈತರು:
ಸಕ್ಕರೆ ಕಾರ್ಖಾನೆಗಳ ಮಾಲೀಕರ ಹಾಗೂ ಸರ್ಕಾರದ ಹಿಡಿತದಿಂದ ಕಬ್ಬು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಮುಖಂಡರು, ಕೂಡಲೇ ಮಧ್ಯಪ್ರವೇಶಿಸಿ ನ್ಯಾಯ ಒದಗಿಸುವಂತೆ ಆಗ್ರಹಿಸಿದ್ದಾರೆ.
"ನಮ್ಮ ಬೆಲೆಗೆ ತಕ್ಕ ನ್ಯಾಯ ಸಿಗುವವರೆಗೆ ಈ ಹೋರಾಟ ನಿಲ್ಲುವುದಿಲ್ಲ. ಸರ್ಕಾರಗಳು ನಮ್ಮ ಸಂಕಷ್ಟಕ್ಕೆ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು" ಎಂದು ರೈತ ಮುಖಂಡರು ಎಚ್ಚರಿಕೆ ನೀಡಿದ್ದಾರೆ.
ಸ್ಥಳದಲ್ಲಿ ಯಾವುದೇ ಕಾನೂನು ಸುವ್ಯವಸ್ಥೆ ಹದಗೆಡದಂತೆ ಪೊಲೀಸ್ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದ್ದು, ಅಧಿಕಾರಿಗಳು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಿದ್ದಾರೆ.